ಮಂಗಳೂರು: ದೇಶಾದ್ಯಂತ ಸುದ್ದಿಯಾಗಿದ್ದ ಸೌಜನ್ಯ ಅತ್ಯಾಚಾರ, ಕೊಲೆ ಆರೋಪ ಪ್ರಕರಣದಲ್ಲಿ ಬೆಂಗಳೂರಿನ ಸಿಬಿಐ ಕೋರ್ಟ್ 11 ವರ್ಷಗಳ ಬಳಿಕ ತೀರ್ಪು ನೀಡಿದ್ದು, ಆರೋಪಿ ಸಂತೋಷ್ ರಾವ್ನನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆ ಮಾಡಿ ತೀರ್ಪು ನೀಡಿದೆ.
ಅವರ ವಿರುದ್ಧ ಸಲ್ಲಿಕೆ ಮಾಡಲಾಗಿರುವ ಸಾಕ್ಷ್ಯಾಧಾರಗಳಲ್ಲಿ ಕೊರತೆ ಇದೆ ಎನ್ನುವ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತ ಮಾಡಿರುವುದಾಗಿ ನ್ಯಾಯಮೂರ್ತಿ ಸಿಬಿ ಸಂತೋಷ್ ತಿಳಿಸಿದ್ದಾರೆ.
ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಆಗಿದ್ದ ಸೌಜನ್ಯ ಪ್ರಕರಣದಲ್ಲಿ 11 ವರ್ಷಗಳ ಬಳಿಕ ತೀರ್ಪು ನೀಡಿದೆ.
ಉಜಿರೆಯ ಎಸ್ಡಿಎಂ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸೌಜನ್ಯ ಅವರು 2012ರ ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಹೋಗುವಾಗ ನಾಪತ್ತೆಯಾಗಿದ್ದರು. ಮರು ದಿನ ರಾತ್ರಿ ಧರ್ಮಸ್ಥಳದ ಮಣ್ಣಸಂಕ ಬಳಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿತ್ತು.
ಶಂಕಿತ ಆರೋಪಿ, ಕಾರ್ಕಳ ತಾಲ್ಲೂಕಿನ ಕುಕ್ಕುಂದೂರು ಗ್ರಾಮದ ನಿವಾಸಿ ಸಂತೋಷ್ ರಾವ್ ಧರ್ಮಸ್ಥಳದ ಬಾಹುಬಲಿ ಬೆಟ್ಟದ ಬಳಿ ಸಾರ್ವಜನಿಕರ ಕೈಗೆ ಸಿಕ್ಕಿದ್ದು, ಬಳಿಕ ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು. ಪೊಲೀಸರು ಆತನನ್ನು ಬಂಧಿಸಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಸಂತೋಷ್ ರಾವ್ ಸುಮಾರು ಆರು ಬಾರಿ ಸಿಬಿಐ ನ್ಯಾಯಾಲಯಕ್ಕೆ ಹಾಜರಾಗದೆ, ತಲೆ ಮರೆಸಿಕೊಂಡಿದ್ದ.
ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಬಳಿಕ ಪೊಲೀಸರು ಸರಿಯಾಗಿ ತನಿಖೆ ನಡೆಸಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು. ಹೀಗಾಗಿ ಹಲವು ಹೋರಾಟಗಳ ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು. ಈಗ 11 ವರ್ಷಗಳ ಸುಧೀರ್ಘ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಅಂತಿಮ ತೀರ್ಪು ನೀಡಿದೆ.