ಮಂಗಳೂರು: ಮಂಗಳೂರು ಏರ್‌ಪೋರ್ಟಿಗೆ ಬಂದಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಪ್ರಶ್ನೆಗಳಿಗೆ ಉತ್ತರಿಸುತ್ತಾ ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

ಸೌಜನ್ಯ ಪ್ರಕರಣದ ಬಗ್ಗೆ ಪ್ರಶ್ನಿಸಿದಾಗ: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು. ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದರು. ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಉತ್ತರಿಸಿ , ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದರು.
ಉಡುಪಿ ಕಾಲೇಜು ವಿಷಯದ ಬಗ್ಗೆ: ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೊಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.