ಮೈಸೂರು: ಸತತ 10 ದಿನಗಳಿಂದ ಬಿದ್ದ ಭಾರೀ ಮಳೆಯ ಪರಿಣಾಮ ಬುಧವಾರ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ ಉಂಟಾಗಿದೆ.ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಈ ಗುಡ್ಡ ಕುಸಿತ ಸಂಭವಿಸಿದೆ.
ಹೆಚ್ಚು ಕಡಿಮೆ 60 ಅಡಿಗಳಷ್ಟು ಗುಡ್ಡ ಕುಸಿದಿದೆ. ಗುಡ್ಡ ಕುಸಿತದಿಂದ ಪ್ರವಾಸಿಗರ ಸಂಚಾರಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಮೈಸೂರಿನಲ್ಲಿ ಧಾರಾಕಾರ ಮಳೆ ಬಂದಿದ್ದು ಕಳೆದ 10 ದಿನಗಳಿಗೆ ಹೋಲಿಸಿದರೆ ನಿನ್ನೆ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಹೀಗಾಗಿ ದೊಡ್ಡ ಮಟ್ಟದಲ್ಲಿ ಗುಡ್ಡ ಕುಸಿತವಾಗಿದೆ. ಎರಡು ವರ್ಷದ ಹಿಂದೆಯೂ ಇದೇ ಮಾರ್ಗದ ಮತ್ತೊಂದು ಭಾಗದಲ್ಲಿ ಗುಡ್ಡ ಕುಸಿತವಾಗಿತ್ತು.
ಕಳೆದ ಕೆಲದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರು ಸಹಿತ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹಿಂಗಾರು ಮಾರುತಗಳಿಂದ ಅಕ್ಟೋಬರ್ ಕೊನೆಯ ವಾರದಲ್ಲಿ ಮತ್ತೆ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.