ಬೆಂಗಳೂರು: ವಿಧಾನಸಭೆ ವಿಪಕ್ಷ ಉಪನಾಯಕನಾಗಿ ಯು.ಟಿ.ಖಾದರ್ ಅವರನ್ನು ನೇಮಿಸಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.
ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಧಿಕೃತ ಘೋಷಣೆ ಮಾಡಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಕರಾವಳಿಯಲ್ಲಿ ಗೆದ್ದಿರುವ ಏಕೈಕ ಕಾಂಗ್ರೆಸ್ ಪ್ರತಿನಿಧಿ ಖಾದರ್.
ಸಿದ್ದರಾಮಯ್ಯ ನೇತೃತ್ವದ 2013-16 ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಸಚಿವರಾಗಿ ಮಹತ್ವದ ಜವಾಬ್ದಾರಿಯನ್ನು ಖಾದರ್ ನಿರ್ವಹಿಸಿದ್ದರು. ಇದೀಗ ಖಾದರ್ ಅವರಿಗೆ ಪಕ್ಷದ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ.
ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಯುಟಿ ಖಾದರ್, ಸಿದ್ದರಾಮಯ್ಯ ಹಾಗು ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಇದೀಗ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ನೇಮಕಗೊಳಿಸಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಆದೇಶಿಸಿದ್ದಾರೆ.
ಪ್ರಸ್ತುತ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಕಾರ್ಯನಿರ್ವಹಿಸುತ್ತಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕನಾಗಿ ಸಿದ್ದರಾಮಯ್ಯನವರಿದ್ದಾರೆ. ಯುಟಿ ಖಾದರ್ ಅವರನ್ನು ವಿಧಾನಸಭೆ ವಿಪಕ್ಷ ಉಪನಾಯಕನಾಗಿ ನೇಮಿಸಲಾಗಿದೆ. ಬಿಕೆ ಹರಿಪ್ರಸಾದ್ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಎಂ.ಬಿ ಪಾಟೀಲ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದಾರೆ.