ಪುತ್ತೂರು: ಕಾರುಗಳ ಮದ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡ ಘಟನೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ನಡೆದಿದೆ.
ಪುತ್ತೂರು ಕಡೆಯಿಂದ ಸುಳ್ಯ ಕಡೆ ಚಲಿಸುತ್ತಿದ್ದ ಸ್ವಿಫ್ಟ್ ಕಾರು ಮತ್ತು ಮಡಿಕೇರಿ ಕಡೆಯಿಂದ ಪುತ್ತೂರು ಮಾರ್ಗವಾಗಿ ಬಜ್ಪೆ ಕಡೆ ಸಾಗುತ್ತಿದ್ದ ಹೊಂಡೈ ಐ 10 ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಐ10 ಕಾರು ಚಾಲಕ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಇತರೆ ಮೂವರಿಗೆ ಗಂಭೀರ ಗಾಯಗಳಾಗಿವೆ. ಇಬ್ಬರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಒಬ್ಬಾಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ, ತಮ್ಮ ಕುಟುಂಬದೊಂದಿಗೆ ಮಡಿಕೇರಿ ಹೋಗಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ವಿರುದ್ದ ಧಿಕ್ಕಿನಿಂದ ಬಂದ ಸ್ವಿಫ್ಟ್ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಂಪ್ಯ ಗ್ರಾಮಾಂತರ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.