ಜೈಪುರ: ಅಂಗಡಿಯೊಂದಕ್ಕೆ ನುಗ್ಗಿ ಟೈಲರ್ ಒಬ್ಬರ ಶಿರಚ್ಛೇದ ಮಾಡಿ, ತಮ್ಮ ದುಷ್ಕೃತ್ಯದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣದ ನಿರ್ವಹಣೆ ರಾಜಸ್ಥಾನ ಸರ್ಕಾರದ ಪಾಲಿಗೆ ದೊಡ್ಡ ಸವಾಲಾಗಿದೆ. ರಾಜ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದ್ದು, ಇಂಟರ್ನೆಟ್ ನಿರ್ಬಂಧಿಸಲಾಗಿದೆ. ಇಡೀ ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಂಗಡಿ-ಮುಂಗಟ್ಟುಗಳು ಬಾಗಿಲು ಹಾಕಿದ್ದು, ಒಟ್ಟಾರೆ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಆಘಾತಕಾರಿ ಕೃತ್ಯ ಎಸಗಿದ ಗೋಸ್ ಮೊಹಮದ್ ಮತ್ತು ರಿಯಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಉದಯಪುರ ಉದ್ವಿಗ್ನಗೊಂಡಿದ್ದು, ಕೋಮು ಸಾಮರಸ್ಯ ಹರಡುವ ಸಾಧ್ಯತೆ ಇರುವ ನಿಟ್ಟಿನಲ್ಲಿ ಏಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಮಂಗಳವಾರ ರಾತ್ರಿ 8 ಗಂಟೆಯಿಂದ ಮುಂದಿನ ಆದೇಶದವರೆಗೂ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ರಾಜಸ್ಥಾನದಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಉದಯಪುರದಲ್ಲಿನ ಘಟನೆಯ ಬಗ್ಗೆ ತನಿಖೆ ನಡೆಸಲು ಕೇಂದ್ರ ಗೃಹ ಸಚಿವಾಲಯ ಎನ್ ಐಎ ತಂಡವನ್ನು ಕಳುಹಿಸಿದೆ.
ಮೊಹಮ್ಮದ್ ಪೈಗಂಬರ್ ಕುರಿತು ವಿವಾದಿತ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಬೆಂಬಲಿಸಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ, ಟೈಲರ್ ಕನ್ಹಯ್ಯಲಾಲ್ ನನ್ನು ಇಬ್ಬರು ಮಂಗಳವಾರ ಶಿರಚ್ಛೇದನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದು, ಈ ಘಟನೆಯ ನಂತರ ರಾಜಸ್ಥಾನದಲ್ಲಿ ತೀವ್ರ ಆಕ್ರೋಶ, ಪ್ರತಿಭಟನೆಗೆ ಎಡೆ ಮಾಡಿಕೊಟ್ಟಿದೆ.
ಮಂಗಳವಾರ (ಜೂನ್ 28) ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ರಾಜ್ ಸಮಂದ್ ಜಿಲ್ಲೆಯ ಭೀಮ್ ಪ್ರದೇಶದಲ್ಲಿ ಇಬ್ಬರು ಆರೋಪಿಗಳಾದ ಗೌಸ್ ಮೊಹಮ್ಮದ್ ಮತ್ತು ರಿಯಾಜ್ ಅಹ್ಮದ್ ನನ್ನು ಪೊಲೀಸರು ಬಂಧಿಸಿದ್ದಾರೆ.