ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕಾಗಿ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕೂಡ ಈ ಬಾರಿ ರಾಜ್ಯದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಮೇ 4ರಂದು ಕರಾವಳಿ ಜಿಲ್ಲೆ ಉಡುಪಿಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದ್ದು ಮೋದಿ ಭಾಗವಹಿಸಲಿದ್ದಾರೆ. ಯೋಗಿ ಆದಿತ್ಯನಾಥ ಅವರು ಪ್ರಧಾನಿಗೆ ಸಾಥ್ ನೀಡಲಿದ್ದಾರೆ ಎಂದು ‘ಪಿಟಿಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ. ಚುನಾವ ಮತದಾನಕ್ಕೆ ಕೇವಲ ಒಂದು ವಾರ ಬಾಕಿ ಇರುವ ಸಂದರ್ಭದಲ್ಲೇ ಮೋದಿಯವರು ಉಡುಪಿಗೆ ಭೇಟಿ ನೀಡುತ್ತಿರುವುದು ಬಿಜೆಪಿ ಪಾಲಿಗೆ ಮಹತ್ವದ್ದಾಗಲಿದೆ ಎನ್ನಲಾಗಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವು ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಪೈಕಿ ನಾಲ್ಕು ಕ್ಷೇತ್ರಗಳು ಉಡುಪಿಯಲ್ಲಿವೆ.
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದಲ್ಲಿ ಸುಮಾರು 15ರಿಂದ 20 ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಈ ಕುರಿತು ಬಿಜೆಪಿ ನಾಯಕರೊಬ್ಬರು ಪ್ರತಿಕ್ರಿಯಿಸಿದ್ದು, ಮೋದಿ ಅವರು ಹೆಚ್ಚು ರ್ಯಾಲಿಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಕರಾವಳಿ ಜಿಲ್ಲೆಯಲ್ಲಿ ಹಿಂದೂ ಮತಬ್ಯಾಂಕ್ ಕ್ರೋಡೀಕರಿಸುವ ನಿಟ್ಟಿನಲ್ಲಿ ಬಿಜೆಪಿ ಯೋಗಿ ಆದಿತ್ಯನಾಥ ಅವರನ್ನು ಪ್ರಚಾರ ಕಣಕ್ಕಿಳಿಸುತ್ತಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಆದಿತ್ಯನಾಥ ಅವರು ಕರ್ನಾಟಕದಲ್ಲಿ ಪ್ರಚಾರ ಮಾಡಿದ್ದರು. ಕಳೆದ ವರ್ಷ ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಎರಡನೇ ಬಾರಿ ಗೆಲುವಿನತ್ತ ಮುನ್ನಡೆಸಿದ ನಂತರ, ಅವರನ್ನು ರಾಜ್ಯ ಚುನಾವಣೆಗಳಲ್ಲಿ ಕೇಸರಿ ಪಕ್ಷದ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾಗಿ ನೇಮಕ ಮಾಡಲಾಗಿದೆ.
ಕರ್ನಾಟಕದಲ್ಲಿ ಮೇ 10 ರಂದು ಒಂದೇ ಹಂತದ ಚುನಾವಣೆ ನಡೆಯಲಿದೆ. ಮತ ಎಣಿಕೆ ಮೇ 13 ರಂದು ನಡೆಯಲಿದೆ.