ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಾಂಗ್ರೆಸ್ನ ಶಾಸಕಾಂಗದ ಪಕ್ಷದ ಸಭೆ ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಭಾನುವಾರ ಸಂಜೆ ನಡೆಯಿತು. ಮುಖ್ಯಮಂತ್ರಿ ಹುದ್ದೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿ ಇರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷರ ನಿರ್ಧಾರಕ್ಕೆ ಬಿಡಲು ಶಾಸಕಾಂಗ ಪಕ್ಷವು ಸರ್ವಾನುಮತದಿಂದ ನಿರ್ಧರಿಸಿದೆ.
ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ. ಈಗ ಅಧಿಕಾರಕ್ಕಾಗಿ ಗೊಂದಲ ಮಾಡಿಕೊಳ್ಳುವುದು ಬೇಡ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸೋಣ. ಉಳಿದಿದ್ದನ್ನು ಹೈಕಮಾಂಡ್ಗೆ ಬಿಡೋಣ ಎಂದು ವೀಕ್ಷಕರು ಹೇಳಿದ್ದಾರೆ.
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಬ್ಬರಿಗೂ ಸಮಾನ ಅವಕಾಶ ಎಂಬ ಪ್ರಸ್ತಾಪವಾಯಿತು. ಆದರೆ, ಇದಕ್ಕೆ ಡಿಕೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು. ನೇರವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಶಾಸಕರ ಮತ ಸಂಗ್ರಹದ ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಇದಕ್ಕೂ ಡಿಕೆ ಶಿವಕುಮಾರ್ ಸಮ್ಮತಿ ಸೂಚಿಸಲಿಲ್ಲ.
ಸಭೆಗೂ ಮುನ್ನ ಶಾಂಗ್ರಿಲಾ ಹೋಟೆಲ್ ಹೊರಭಾಗದಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ‘ಡಿಕೆ ಶಿವಕುಮಾರ್ ಮುಂದಿನ ಸಿಎಂ’ ಎಂದು ಘೋಷಣೆ ಕೂಗಿದರು. ಮತ್ತೊಂದೆಡೆ, ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಅವರ ಬೆಂಬಲಿಗರು ಘೋಷಣೆ ಕೂಗಿದ್ದು ಕಾಣಿಸಿತು.
ದೆಹಲಿ ಬುಲಾವ್:
ಪೈಪೋಟಿ ನಡುವೆ ಗೊಂದಲ ಸೃಷ್ಠಿಯಾಗಬಾರದೆಂದು, ಇಬ್ಬರು ನಾಯಕರನ್ನು ದೆಹಲಿಗೆ ಕರೆಯಲಾಗಿದೆ. ನಾಳೆಯೇ ಇಬ್ಬರು ನಾಯಕರು ದೆಹಲಿ ತೆರಳಲಿದ್ದು, ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಯಲಿದೆ.