ಉಡುಪಿ: ಪ್ಯಾರಾ ಮೆಡಿಕಲ್ ಶೌಚಾಲಯದಲ್ಲಿ ಸಹಪಾಠಿ ವಿದ್ಯಾರ್ಥಿನಿಯರ ವೀಡಿಯೋ ಶೂಟ್ ಮಾಡಿರುವ ಆರೋಪ ಹೊತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಶುಕ್ರವಾರ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಮೂವರು ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಇಂದು ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಲ್ಲದೆ, ತನಿಖಾಧಿಕಾರಿಗಳಿಗೆ ತನಿಖೆಗೆ ಸಹಕರಿಸುವುದು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗುವುದು, ಸಾಕ್ಷಿಗಳಿಗೆ ಯಾವುದೇ ಬೆದರಿಕೆಯೊಡ್ಡದಿರುವುದು ಮತ್ತು ತಲಾ 20,000ರೂ ಮೊತ್ತ ಬಾಂಡ್ ನ್ಯಾಯಾಲಯಕ್ಕೆ ಸಲ್ಲಿಸುವುದು ಸೇರಿದಂತೆ ಹಲವು ಷರತ್ತುಗಳೊಂದಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.