ಬಂಟ್ವಾಳ: ಕಾಂಗ್ರೆಸ್ ಬೆಂಬಲಿತ ಸದಸ್ಯರೊಬ್ಬರ ಅಡ್ಡ ಮತದಿಂದ ಬಡಗಕಜೆಕಾರು ಗ್ರಾಮ ಪಂಚಾಯತ್ ಬಿಜೆಪಿ ಪಾಲಾಗಿದೆ. ಗ್ರಾ.ಪಂ.ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ದೇವದಾಸ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಸುಗಂಧಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 12 ಸದಸ್ಯ ಬಲದ ಬಡಗಕಜೆಕಾರು ಗ್ರಾಮ ಪಂಚಾಯತ್ ನಲ್ಲಿ 5 ಮಂದಿ ಬಿಜೆಪಿ ಬೆಂಬಲಿತ ಸದಸ್ಯರು, 5 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಹಾಗೂ 2 ಎಸ್ ಡಿಪಿಐ ಬೆಂಬಲಿತ ಸದಸ್ಯರಿದ್ದರು. ಎಸ್ ಡಿಪಿಐ ಬೆಂಬಲಿತ ಇಬ್ಬರು ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದರು. ಆದರೆ ಓರ್ವ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಬಿಜೆಪಿ ತನ್ನತ್ತ ಸೆಳೆದುಕೊಂಡಿದ್ದು, ಅವರು ಬಿಜೆಪಿಗೆ ಅಡ್ಡ ಮತದಾನ ಮಾಡಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ತಲಾ 6 ಮತಗಳನ್ನು ಸಮಬಲ ಸಾಧಿಸಿದ್ದರು. ಬಳಿಕ ಚೀಟಿ ಎತ್ತುವ ಪ್ರಕ್ರಿಯೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.