
ಮಂಗಳೂರು: ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಸೆ. 12ರವರೆಗೂ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಿನ್ನೆ 168.4 ಮಿ.ಮೀ. ಮಳೆ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಶರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಲಿಂಗನಮಕ್ಕಿ ಜಲಾಶಯ ತುಂಬಲು ಕೆಲವೇ ಅಡಿಗಳು ಬಾಕಿ ಇವೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯ ಜೊತೆಗೆ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇಂದು ವಾಯುವ್ಯ ಭಾರತ ಮತ್ತು ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾದಗಿರಿ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಭಾರೀ ಮಳೆಗೆ ಸಂಪರ್ಕ ಸೇತುವೆ ಕೊಚ್ಚಿ ಹೋಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಉಡುಪಿ, ಕುಂದಾಪುರ, ಬೈಂದೂರು, ಹುಲಿಕಲ್, ಹಾಲಾಡಿ, ಕಾರ್ಕಳ, ಮಣಿಪಾಲ ಮುಂತಾದೆಡೆಯೂ ಮಳೆ ಜೋರಾಗಿದೆ.
https://twitter.com/metcentre_bng/status/1435547991717208064?