ಮೈಸೂರು: ಜಿಲ್ಲೆಯಲ್ಲಿ ಧಾರ್ಮಿಕ ಕಟ್ಟಡಗಳ ತೆರವಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಅಗ್ರಹಾರದ 101 ಗಣಪತಿ ದೇವಸ್ಥಾನ ತೆರವಿಗೆ ವಿರೋಧ ವ್ಯಕ್ತಪಡಿಸಿದ ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಮೈಸೂರು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸುಪ್ರೀಂಕೋರ್ಟ್ ಆದೇಶದಂತೆ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ. ಜಿಲ್ಲಾಡಳಿತದ ಈ ಕ್ರಮಕ್ಕೆ ಸಂಸದ ಪ್ರತಾಪ್ ಸಿಂಹ ಆಕ್ರೋಶ ಹೊರಹಾಕಿದ್ದಾರೆ.
ಈ ವೇಳೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಮೈಸೂರಿನ 101 ಗಣಪತಿ ದೇವಾಲಯ ನಮ್ಮ ಪ್ರತೀಕ. ನಾವು ಯಾವುದೇ ವಾಹನ ಖರೀದಿ ಮಾಡಿದರು ಇಲ್ಲಿ ಪೂಜೆ ಮಾಡಿಸುತ್ತೇವೆ. ಇದಕ್ಕೆ ನೋಟಿಸ್ ಕೊಟ್ಟು ನೆಲಸಮ ಮಾಡುತ್ತೇವೆ ಅಂತಾ ಜಿಲ್ಲಾಡಳಿತ ಹೇಳಿದೆ. ಇದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗಿದೆ. ಅದಕ್ಕೆ ಪ್ರತಿರೋಧ ವ್ಯಕ್ತವಾಗುತ್ತಿದೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು. ಕಳ್ಳರಂತೆ ಬೆಳಗಿನ ಜಾವ ಬಂದು ದೇಗುಲ ಒಡೆಯುತ್ತಿದ್ದಾರೆ ಎಂದು ಹೇಳಿದರು.