ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಭಿನ್ನ ನಂಬಿಕೆಯ ಮಹಿಳೆಯೊಂದಿಗೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು ನಗರ ಪೊಲೀಸ್ ಇಲಾಖೆ ತ್ವರಿತವಾಗಿ ಕಾರ್ಯನಿರ್ವಹಿಸಿದೆ ಎಂದಿದ್ದಾರೆ.
ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧನಕ್ಕೆ ಒಳಪಡಿಸಲಾಗಿದೆ ಹಾಗೂ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು ಕಾನೂನು ಕ್ರಮ ಆರಂಭಿಸಲಾಗಿದೆ. ಸರ್ಕಾರ ಇಂತಹ ಪ್ರಕರಣಗಳ ವಿರುದ್ಧ ಗಂಭೀರ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಡೈರಿ ಸರ್ಕಲ್ ಬಳಿಯಲ್ಲಿ ಈ ಘಟನೆ ನಡೆದಿತ್ತು. ಭಿನ್ನ ಕೋಮಿನ ಯುವತಿ ಹಾಗೂ ಯುವಕ ಬೈಕಿನಲ್ಲಿ ಜೊತೆಗೆ ಪ್ರಯಾಣ ಮಾಡಿದ್ದನ್ನು ಕೆಲವು ಮುಸ್ಲಿಂ ಯುವಕರು ಆಕ್ಷೇಪ ವ್ಯಕ್ತಪಡಿಸಿ ಮಹೇಶ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಅಷ್ಟೇ ಅಲ್ಲದೆ ಬೈಕ್‌ನಲ್ಲಿ ಜೊತೆಗೆ ಪ್ರಯಾಣ ಮಾಡುತ್ತಿದ್ದ ಮುಸ್ಲಿಂ ಯುವತಿಗೂ ಬೆದರಿಕೆ ಹಾಕಿದ್ದರು. ಹಾಗೂ ನೈತಿಕ ಪೊಲೀಸ್ ಗಿರಿ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬೆಂಗಳೂರು ನಗರದಲ್ಲೂ ಇಂತಹ ನೈತಿಕ ಪೊಲೀಸ್ ಗಿರಿ ಘಟನೆ ನಡೆದಿರುವುದಕ್ಕೆ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದರು. ಅಲ್ಲದೆ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.
ಸದ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರ ವಿರುದ್ಧ ಪ್ರಕರಣವೂ ದಾಖಲಾಗಿದೆ. ಭಿನ್ನ ಕೋಮಿನ ಪುರುಷ- ಮಹಿಳೆ ಜೊತೆಗೆ ಕಾಣಿಸಿಕೊಂಡಲ್ಲಿ ನೈತಿಕ ಪೊಲೀಸ್ ಗಿರಿ ನಡೆಸುತ್ತಿರುವ ಘಟನೆ ಕರಾವಳಿ ಭಾಗದಲ್ಲಿ ಸಾಮಾನ್ಯವಾಗಿದೆ. ಆದರೆ ಸಿಲಿಕಾನ್ ಸಿಟಿ ಬೆಂಗಳೂರಿಗೂ ಇದೀಗ ಕಾಲಿಟ್ಟಿರುವುದು ನಿಜಕ್ಕೂ ಆತಂಕ ಸೃಷ್ಟಿಸಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.