ಪುತ್ತೂರು: ವ್ಯಾಯಾಮದ ನೆಪದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕನನ್ನು ಬಂಧಿಸಲಾಗಿದೆ.ಈ ಪ್ರಕರಣ ಸಂಬಂಧ ಹುಡುಗಿಯ ತಾಯಿ ನೀಡಿದ ದೂರಿನ ಮೇರೆಗೆ ಪೋಕ್ಸೊ ಕಾಯ್ದೆಯಡಿ ಮಹಿಳಾ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ್ದು ಆಕೆ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದರು.
ಆಕೆಯ ಪೋಷಕರು ಸಂಸ್ಥೆಗೆ ಬಂದು ಆಕೆಯನ್ನು ವಿಚಾರಿಸಿ ಬಳಿಕ ಅ.25ರಂದು ಸಂಜೆ ಘಟನೆಯ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವಿದ್ಯಾರ್ಥಿನಿಯ ಕಡೆಯಿಂದ ನೀಡಿದ ದೂರಿನಂತೆ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ನೇತೃತ್ವದಲ್ಲಿ ಬಂಧಿಸಲಾಗಿದೆ