ಮಂಗಳೂರು: ಖಾಸಗಿ ಟಿವಿ ವಾಹಿನಿಯ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಖಾಸಗಿ ಟಿವಿ ವರದಿಗಾರರಾಗಿರುವ ಸುಖ್ ಪಾಲ್ ಪೊಳಲಿ ಅವರ ಮೇಲೆ ಯದುನಂದನ್ ಎನ್ನುವವರು ಸೋಮವಾರ ಸಂಜೆ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ತಲೆಗೆ ಪೆಟ್ಟು ಬಿದ್ದ ಸುಖ್ ಪಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಯದುನಂದನ್ ಮೇಲೆ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ವೈಯಕ್ತಿಕ ವಿಚಾರದ ದ್ವೇಷ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆ ಖಂಡಿಸಿದ ಜಿಲ್ಲಾ ಪತ್ರಕರ್ತರ ಸಂಘ:
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ, ಜಿಲ್ಲಾ ವರದಿಗಾರರಾಗಿರುವ ಸುಖಪಾಲ್ ಪೊಳಲಿ ಅವರ ಮೇಲೆ ಕಳೆದ ರಾತ್ರಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಓರ್ವ ಆರೋಪಿಯನ್ನು ಬಂಧಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ರನ್ನು ಇಂದು ಭೇಟಿ ಮಾಡಿ ತಪ್ಪಿತಸ್ಥತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.