ವಿಟ್ಲ : ಮದುವೆ ಸಮಾರಂಭದಲ್ಲಿ ಮದುಮಗನಿಗೆ ಆತನ ಗೆಳೆಯರ ಬಳಗವು ಕೊರಗ ವೇಷ ಹಾಕಿ ಕುಣಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಸೇಸಪ್ಪ ಬೆದ್ರಕಾಡು ರವರು ಘಟನೆ ನಡೆದಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಂದ ವೀಡಿಯೋ ಕಂಡು ಗೊತ್ತಾಗಿದೆ. ಈ ಬಗ್ಗೆ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ. ಪೊಲೀಸ್ ಇಲಾಖೆಗೂ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಹಿಂದೂ ಜಾಗರಣ ವೇದಿಕೆ ಈ ಕೃತ್ಯವನ್ನು ಖಂಡಿಸಿದ್ದು, ಸ್ವಯಂ ಪ್ರೇರಿತ ದೂರು ದಾಖಲಿಸದೇ ಇದ್ದಲ್ಲಿ ಪೋಲಿಸ್ ಠಾಣೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದೆ.
ಹಲವು ಸಂಘಟನೆಗಳು ವಿಟ್ಲ ಠಾಣೆಗೆ ದೂರು ನೀಡಿದ್ದು ಯಾವುದೇ FIR ಇನ್ನೂ ಆಗಿಲ್ಲ ಎಂದು ಪೊಲೀಸರು ಪ್ರತಿಕ್ರಿಯಿಸಿದ್ದಾರೆ.
ಘಟನೆಯ ವಿವರ ಮತ್ತು ಏನಿದು ವಿವಾದ?
ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ದಿನ ಈ ಘಟನೆ ನಡೆದಿದ್ದು, ಮಂಜೇಶ್ವರ ತಾಲೂಕಿನ ಉಪ್ಪಳದ ಯುವಕನ ಜೊತೆ ಅಝೀಝ್ ಪುತ್ರಿಯ ವಿವಾಹ ಮಧ್ಯಾಹ್ನ ನಡೆದಿತ್ತು, ಸಾವಿರಾರು ಜನರಿಗೆ ಔತಣ ಕೂಟವನ್ನು ಕೂಡ ಏರ್ಪಡಿಸಿದ್ದರು.
ನಿನ್ನೆ ದಿನ ರಾತ್ರಿ ಮುಸ್ಲಿಂಮರ ಸಂಪ್ರದಾಯದಂತೆ ವರ ತನ್ನ 50ಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ ಗೆಳೆಯರ ಬಳಗದೊಂದಿಗೆ ಆಗಮಿಸಿದ್ದಾನೆ. ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದರು ಎಲ್ಲಾ ಕಡೆಯು ಈ ಒಂದು ದಿನದಂದು ಮದು ಮಗನನ್ನು ಒಂದಷ್ಟು ಸತಾಯಿಸಿ ಹೆಣ್ಣಿನ ಮನೆಯಲ್ಲಿ ಬಿಟ್ಟು ಹೋಗುವುದು ಈಗೀಗ ರೂಡಿಯಾಗಿದ್ದು ನಿನ್ನೆ ಈ ಕೃತ್ಯ ಮೀತಿ ಮೀರಿತ್ತು ಎಂದು ವೀಡಿಯೋ ನೋಡಿದಾಗ ತೋಚುತ್ತಿದೆ. ನಿನ್ನೆಯ ದಿನ ಮದುಮಗನನ್ನು ಈತನ ಗೆಳೆಯರು ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿಕೊಂಡು ವರನನ್ನು ಕರೆದುಕೊಂಡು ಬಂದಿದ್ದರು ಎನ್ನಲಾಗಿದೆ.
ವರ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿಕೊಂಡ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವಂತಿದೆ ಎಂದು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಕಿಡಿಗೇಡಿಯ ವಿರುದ್ಧ ತಕ್ಷಣ ಸ್ವಯಂ ಪ್ರೇರಿತ ಕೇಸು ದಾಖಲಿಸಬೇಕು, ಇಲ್ಲದಿದ್ದಲ್ಲಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತೇವೆ ಎಂದು ವಿಟ್ಲ ತಾಲೂಕಿನ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಗಣೇಶ್ ಕುಲಾಲ್ ಕೆದಿಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೀಡಿಯೋ ನೋಡಿ