ಶಿವಮೊಗ್ಗ: ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯತಿ ಸದಸ್ಯರಿಬ್ಬರು ಹೊಡೆದಾಡಿಕೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ಗುರುವಾರ ಬೆಳಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇಬ್ಬರು ಗ್ರಾಮ ಪಂಚಾಯತಿ ಸದಸ್ಯರು ಹೊಡೆದಾಡಿಕೊಂಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಓರ್ವರು ಗಂಭೀರ ಗಾಯಗೊಂಡಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಭೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಗಲಾಟೆ ನಡೆದಿದೆ. ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಾತಿನ ಚಕಮಕಿ ನಡಯಿತು. ಬಳಿಕ ಇಬ್ಬರು ಕೈ ಕೈ ಮಿಲಾಯಿಸಿ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಸುರೇಶ್ಗೆ ಗಂಭೀರ ಗಾಯವಾಗಿದೆ. ಸದ್ಯ ಸುರೇಶ್ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಕೋಣಂದೂರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಈ ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರು ದಾಖಲಾಗಿದೆ.