ಉಳ್ಳಾಲ: ತಲಪಾಡಿ ಗ್ರಾಮದ ನಾರ್ಲ ಪಡೀಲ್ ರಾಮನಗರ ಎಂಬಲ್ಲಿ ನಿನ್ನೆ ಕಾರಿನಲ್ಲಿ ಅಕ್ರಮವಾಗಿ ಗಾಂಜಾವನ್ನು ಕೇರಳದಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಅದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳು ಕೇರಳದ ಕುಂಜತ್ತೂರಿನಿಂದ ಮಂಗಳೂರಿಗೆ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡಿ ಮಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪೊಲೀಸರು ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳಾದ,ಪ್ರಫುಲ್ ರಾಜ್, ಅವಿನಾಶ್ ಎಂಬವರನ್ನು ದಸ್ತಗಿರಿ ಮಾಡಿ ಅವರ ವಶದಿಂದ 2.220 ಕೆಜಿ ತೂಕದ ಗಾಂಜಾ, 1200 ನಗದು ಹಾಗೂ 2 ಮೊಬೈಲ್ ಫೋನ್‌ಗಳು ಹಾಗೂ ಮಾರುತಿ ಸ್ವಿಪ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಆರೋಪಿಗಳಿಂದ ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ಒಟ್ಟು 5,50,400 ರೂಪಾಯಿ ಆಗಿರಬಹುದೆಂದು ಅಂದಾಜು ಮಾಡಲಾಗಿದೆ.
ಈ ಆರೋಪಿಗಳ ಪೈಕಿ ಅವಿನಾಶ್ ಎಂಬಾತನು ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಕಾರಿ ವಾಹನಕ್ಕೆ ಹಾನಿಗೊಳಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದನು.
ಇವರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐಯವರಾದ ರಾಜೇಂದ್ರ ಬಿ, ಪ್ರದೀಪ ಟಿ ಆರ್ ಹಾಗೂ ಸಿಸಿಬಿ ಸಿಬ್ಬಂದಿಯವರು ಇದರಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ.