ದೆಹಲಿ: ನಿವೃತ್ತ IPS ಅಧಿಕಾರಿ, ಬೆಂಗಳೂರು ನಗರದಲ್ಲಿ ಪೊಲೀಸ್ ಅಧಿಕಾರಿ ಆಗಿದ್ದ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ.
ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಪಕ್ಷಕ್ಕೆ ಸೇರ್ಪಡೆ ಆಗಿದ್ದು ಪಕ್ಷದ ಚಿಹ್ನೆ ಹೊಂದಿರುವ ಶಾಲು ಧರಿಸಿ, ಆಪ್ ಎಂಬ ಗಾಂಧಿ ಟೋಪಿ ಧರಿಸಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ.
ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಆಶಿಸಿ ಕರ್ನಾಟಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು.
ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೇ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಅಧಿಕೃತವಾಗಿ ಅವರು ಆಪ್ಗೆ ಸೇರ್ಪಡೆಗೊಂಡಿದ್ದಾರೆ.
ಪೊಲೀಸ್ ಅಧಿಕಾರಿ ಆಗಿ ವೃತ್ತಿಜೀವನ ಅಂತ್ಯಗೊಂಡಿರುವ ಬಗ್ಗೆ, ಹೊಸಪಯಣದ ಕುರಿತು ನಿನ್ನೆಯಷ್ಟೇ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದರು. 32 ವರ್ಷಗಳ ಐಪಿಎಸ್ ಜೀವನಕ್ಕೆ ತೆರೆ ಎಳೆಯುತ್ತಿದ್ದೇನೆ. ನನ್ನ ಕುಟುಂಬಕ್ಕೆ, ಗೆಳೆಯರಿಗೆ, ಸಹೋದ್ಯೋಗಿಗಳಿಗೆ, ಹಿರಿ, ಕಿರಿಯರಿಗೆ, ಪಕ್ಷಾತೀತವಾಗಿ ಕರ್ನಾಟಕದ ಸರ್ಕಾರಗಳಿಗೆ ಧನ್ಯವಾದಗಳು ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದರು.