ಮಂಗಳೂರು: ಶಾಲಾ ಕಾಲೇಜುಗಳಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಹಿನ್ನೆಲೆ ನಾಳೆಯಿಂದ ಮೇ 18 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ನಿಷೇಧಾಜ್ಞೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಹಾಗೂ ಅನುಮಾನಗಳಿಗೆ ಆಸ್ಪದವಿಲ್ಲದೇ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ತೀರ್ಮಾನಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿರುವ ಸಂಬಂಧಿತ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಕಲಂ 144 ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ನಗರ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಅವರು ಆದೇಶವನ್ನು ಹೊರಡಿಸಿದ್ದಾರೆ.
ಈ ಸಮಯದಲ್ಲಿ ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತು ಪಡಿಸಿ ಸಾರ್ವಜನಿಕರು 5 ಅಥವಾ ಅದಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗಾಡುವುದನ್ನು ಕೂಡ ನಿಷೇಧಿಸಲಾಗಿದೆ.ಈ ರೀತಿಯಾಗಿ ಕಂಡು ಬಂದಲ್ಲಿ ಕಾನೂನು ರೀತಿಯ ಕ್ರಮವನ್ನು ಕೈಗೊಳ್ಳಲಾಗುವುದು.