ಕಾಳಿಮೇಡು(ತಮಿಳುನಾಡು): ರಥೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಸುಕಿನ ವೇಳೆ ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಕಾಳಿಮೇಡುವಿನ ಅಪ್ಪಾರ್ ಮಾದಂ ದೇವಸ್ಥಾನದ ರಥೋತ್ಸವದ ಮೆರವಣಿಗೆ ವೇಳೆ ರಥ ಹೈವೋಲ್ಟೇಜ್ ವಿದ್ಯುತ್ ತಂತಿಗೆ ತಗುಲಿದಾಗ ಈ ದುರಂತ ಸಂಭವಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ತಿರುಚಿರಾಪಲ್ಲಿ ಸೆಂಟ್ರಲ್ ಝೋನ್ ನ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ವಿ.ಬಾಲಕೃಷ್ಣನ್ ವಿವರ ನೀಡಿರುವುದಾಗಿ ವರದಿ ಹೇಳಿದೆ.
ತಮಿಳುನಾಡಿನ ತಂಜಾವೂರಿನಲ್ಲಿ ಪ್ರತಿವರ್ಷ ನಡೆಯುವ ಈ ರಥೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಭಾಗವಹಿಸುತ್ತಾರೆ. ಆದರೆ ಪ್ರತಿವರ್ಷ ನಡೆಯುವ ರಥೋತ್ಸವದ ಕುರಿತು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿರುವುದಾಗಿ ವರದಿ ತಿಳಿಸಿದೆ.
ಹೈವೋಲ್ಟೇಜ್ ತಂತಿ ಸ್ಪರ್ಶಿಸಿದ ಪರಿಣಾಮ ರಥ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದು, ಮೃತಪಟ್ಟ ಕುಟುಂಬ ಸದಸ್ಯರಿಗೆ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಘಟನೆಯಲ್ಲಿ ಸಾವನ್ನಪ್ಪಿರುವ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ