ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಸದ್ಯದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು 14 ದಿನ ಕಸ್ಟಡಿಗೆ ಕೇಳಲಿದ್ದಾರೆ.
ಈ ಪ್ರಕರಣ ಸಂಬಂಧ ಕೆಲವು ಸಾಕ್ಷ್ಯಾಧಾರಗಳ ಮೇಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಸಿಸಿಟಿವಿಯೊಂದರ ಸಾಕ್ಷಿ ಪ್ರಕಾರ ಆರೋಪಿ ಝಾಕೀರ್ ಕೊಲೆಯಾದ ಪ್ರವೀಣ್ ಅಂಗಡಿಯ ಬಳಿ 40 ನಿಮಿಷಕ್ಕೂ ಹೆಚ್ಚು ಕಾಲ ನಿಂತಿದ್ದರು.
ಅದೇ ರೀತಿ ಮತ್ತೋರ್ವ ಆರೋಪಿ ಶಫಿಕ್ ಸಾಮಾಜಿಕ ಜಾಲತಾಣ ಟೆಲಿಗ್ರಾಂ ಮೂಲಕ ಕೊಲ್ಲಿ ರಾಷ್ಟ್ರದವರ ಜೊತೆ ಸಂಪರ್ಕ ಬೆಳೆಸಿದ್ದನು ಎಂದು ತಿಳಿದು ಬಂದಿದೆ.
ಆದರೆ ಈ ಸಾಕ್ಷ್ಯಗಳ ಜೊತೆ ಹಲವು ಸಾಕ್ಷಿಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಜೊತೆಗೆ ಎಲ್ಲಾ ಸಾಕ್ಷಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ಬಂಧಿತ ಆರೋಪಿಗಳು ಕೊಲೆಯಲ್ಲಿ ನೇರವಾಗಿ ಭಾಗಿಯಾಗದಿದ್ದರೂ ಕೊಲೆಗಡುಕರಿಗೆ ಸಹಾಯ ಮಾಡಿದ್ದರು ಎಂಬ ಅಂಶ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.
ಕಮೀಷನರೇಟ್ ವ್ಯಾಪ್ತಿಯಲ್ಲಿ ಹಲವರು ವಶಕ್ಕೆ
ಬೆಳ್ಳಾರೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ.
ಮುಂಜಾಗ್ರತ ಕ್ರಮವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಕೋಮು ಉದ್ವಿಗ್ನತೆ: ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ:
ಶ್ರೀರಾಮ ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ.
ಪ್ರವೀಣ್ ನೆಟ್ಟಾರು ಮನೆಗೆ ಮುತಾಲಿಕ್ ಭೇಟಿ ನೀಡುವ ಹಾಗೂ ಉದ್ರೇಕಕಾರಿಯಾಗಿ ಮಾತನಾಡುವ ಸಾಧ್ಯತೆ ಇರುವುದರಿಂದ ಈ ಕ್ರಮ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಗುರುವಾರ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶಿತರಾಗಿದ್ದು , ಜಿಲ್ಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.