ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಿದೆ.

ಕಡಬ ತಾಲೂಕಿನ ಸವಣೂರಿನಲ್ಲಿ ಫಾಸ್ಟ್ಫುಡ್ ಅಂಗಡಿ ವ್ಯವಹಾರ ನಡೆಸುತ್ತಿರುವ ಮಹಮ್ಮದ್ ಝಾಕೀರ್ ಮತ್ತು ಬೆಳ್ಳಾರೆಯವನಾಗಿದ್ದು ಸುಳ್ಯ ತಾಲೂಕಿನ ಗುತ್ತಿಗಾರಿನ ಅಡಿಕೆ ಅಂಗಡಿಯೊಂದರಲ್ಲಿ ಕೆಲಸಕ್ಕಿರುವ ಶಫೀಕ್ ನ್ಯಾಯಾಂಗ ಬಂಧನಕ್ಕೊಳಗಾದವರೆಂದು ತಿಳಿದು ಬಂದಿದೆ.
ಆರೋಪಿಗಳಾದ ಝಾಕೀರ್ ಮತ್ತು ಶಫೀಕ್ನನ್ನು ಬೆಳ್ಳಾರೆ ಠಾಣೆಯ ಪೊಲೀಸರು ಗುರುವಾರ ಸಂಜೆ ಪುತ್ತೂರಿನ ಪ್ರಧಾನ ಹಿರಿಯ ವ್ಯಾಪಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಧೀಶ ಗೌಡ.ಆರ್.ಪಿ ಅವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಂ 302 ಅಡಿಯಲ್ಲಿ ಬಂಧಿತರಾಗಿರುವ ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದು ಕೊಲೆ ಪ್ರಕರಣದ ತನಿಖೆಗೆ ಅಗತ್ಯವಿದ್ದಲ್ಲಿ ಪೊಲೀಸರು ಮತ್ತೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಿದ್ದಾರೆ ಎಂದು ಸರ್ಕಾರಿ ಸಹಾಯಕ ಅಭಿಯೋಜಕಿ ಕವಿತಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.